ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರ ವ್ಯಾಪ್ತಿಯ 26 ಪರೀಕ್ಷಾ ಕೇಂದ್ರಗಳಲ್ಲಿ ಆಗಸ್ಟ್ 02 ರಂದು ನಡೆಯಲಿರುವ ಪೊಲೀಸ್ ಕಾನ್ಸ್‍ಸ್ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಸುಸೂತ್ರವಾಗಿ ನಡೆಸುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಆದೇಶ ಹೊರಡಿಸಿದ್ದಾರೆ.
ಕಾರ್ಯನಿರ್ವಾಹಕ ನಿರ್ದೇಶಕರು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬೆಂಗಳೂರು ಇವರ ವೇಳಾಪಟ್ಟಿಯಂತೆ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಹಾಗೂ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.
ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಕಲಂ 163ರ ಅಡಿಯಲ್ಲಿ ಈ ಆದೇಶ ಹೊರಡಿಸಲಾಗಿದ್ದು, ಕೇಂದ್ರಗಳ ಸುತ್ತಮುತ್ತಲಿರುವ ಎಲ್ಲಾ ಜಿರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಹಾಗೂ ಇಂಟರ್‍ನೆಟ್ ಕೇಂದ್ರಗಳನ್ನು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕಡ್ಡಾಯವಾಗಿ ಮುಚ್ಚುವಂತೆ ಸೂಚಿಸಲಾಗಿದೆ.
ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರದ ಒಳಗೆ ಯಾವುದೇ ಕಾರಣಕ್ಕೂ ಮೊಬೈಲ್ ಪೋನ್ ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.



