ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪರಿಶಿಷ್ಟ ಜಾತಿ (ಎಸ್ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್ಟಿ) ಗಳ ಮೀಸಲಾತಿಯನ್ನು ಹೆಚ್ಚಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಮೀಸಲಾತಿಯ ಮಿತಿಯನ್ನು ಶೇಕಡಾ 50ರಿಂದ 56ಕ್ಕೆ ಏರಿಕೆ ಮಾಡಿರುವುದು ಸಂವಿಧಾನ ಬಾಹಿರವಾಗಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
2023ರಲ್ಲಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದ ವೇಳೆ ಹೊರಡಿಸಲಾಗಿದ್ದ ಈ ಅಧಿಸೂಚನೆಯನ್ನು ಪ್ರಶ್ನಿಸಿ ಮಹೇಂದ್ರ ಕುಮಾರ್ ಮಿಶ್ರಾ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಖಬ್ರು ಮತ್ತು ನ್ಯಾಯಮೂರ್ತಿ ಕೆ.ಎಸ್. ಹೇಮಲತಾ ಅವರನ್ನು ಒಳಗೊಂಡ ವಿಭಾಗೀಯ ಪೀಠ ಈ ಮಹತ್ವದ ತೀರ್ಪು ಪ್ರಕಟಿಸಿದೆ.
ಬಿಜೆಪಿ ಸರ್ಕಾರದ ಹಿಂದಿನ ಆದೇಶವೇನಿತ್ತು?:
ಶೈಕ್ಷಣಿಕ ಸಂಸ್ಥೆಗಳ ಪ್ರವೇಶಾತಿ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಎಸ್ಸಿ ಹಾಗೂ ಎಸ್ಟಿ ಮೀಸಲಾತಿ ಪ್ರಮಾಣವನ್ನು ಹಿಂದಿನ ಬಿಜೆಪಿ ಸರ್ಕಾರ ಹೆಚ್ಚಿಸಿತ್ತು. ಇದರನ್ವಯ ಎಸ್ಸಿ ಮೀಸಲಾತಿಯನ್ನು ಶೇಕಡಾ 15ರಿಂದ 17ಕ್ಕೆ ಹಾಗೂ ಎಸ್ಟಿ ಮೀಸಲಾತಿಯನ್ನು ಶೇಕಡಾ 3ರಿಂದ 7ಕ್ಕೆ ಏರಿಕೆ ಮಾಡಲಾಗಿತ್ತು. ಅಂದರೆ ಎಸ್ಸಿಯಲ್ಲಿ ಶೇಕಡಾ 2 ಮತ್ತು ಎಸ್ಟಿಯಲ್ಲಿ ಶೇಕಡಾ 5ರಷ್ಟು ಹೆಚ್ಚಳವಾಗಿ, ಒಟ್ಟಾರೆ ಮೀಸಲಾತಿ ಪ್ರಮಾಣವು ಶೇಕಡಾ 50ರ ಮಿತಿಯನ್ನು ದಾಟಿ ಶೇಕಡಾ 56ಕ್ಕೆ ತಲುಪಿತ್ತು.
ಕಾಂಗ್ರೆಸ್ Vs ಬಿಜೆಪಿ ರಾಜಕೀಯ ಜಟಾಪಟಿ:
ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಈ ಆದೇಶ ಹೊರಡಿಸಿದ ಸಂದರ್ಭದಲ್ಲಿ ವಿಪಕ್ಷದಲ್ಲಿದ್ದ ಕಾಂಗ್ರೆಸ್ ಪಕ್ಷವು, ಈ ಮೀಸಲಾತಿಯನ್ನು ಸಂವಿಧಾನದ 9ನೇ ಪರಿಚ್ಛೇದಕ್ಕೆ ಸೇರಿಸಬೇಕೆಂದು ಆಗ್ರಹಿಸಿತ್ತು. ಪ್ರಸ್ತುತ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಈ ಮೀಸಲಾತಿ ಆದೇಶವನ್ನು ತಡೆಹಿಡಿದಿದೆ ಎಂದು ಆರೋಪಿಸಿರುವ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಅಲ್ಲದೆ, ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸುವ ಎಚ್ಚರಿಕೆಯನ್ನೂ ನೀಡಿದೆ.
ಈ ಬೆಳವಣಿಗೆಯು ಪ್ರಸ್ತುತ ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ರಾಜಕೀಯ ತಲೆನೋವಾಗಿ ಪರಿಣಮಿಸಿದೆ. ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರತಿಕ್ರಿಯಿಸಿ, "ದಲಿತರ ಪರ, ಸಂವಿಧಾನ ಪರ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಪರ ಎಂದು ಹೇಳಿಕೊಳ್ಳುವ ಕಾಂಗ್ರೆಸಿಗರು ಈಗ ಮೀಸಲಾತಿ ವಿಚಾರದಲ್ಲಿ ಈ ಮೂರಕ್ಕೂ ಎಳ್ಳುನೀರು ಬಿಟ್ಟಿದ್ದಾರೆ" ಎಂದು ಆರೋಪಿಸಿದ್ದಾರೆ. ಇನ್ನು ವಿಧಾನಸಭಾ ವಿಪಕ್ಷ ನಾಯಕ ಆರ್. ಅಶೋಕ್ ಮಾತನಾಡಿ, "ಮೀಸಲಾತಿ ಪ್ರಮಾಣ ಕಡಿತಗೊಳಿಸುವ ಮೂಲಕ ಕಾಂಗ್ರೆಸ್ ಸರ್ಕಾರ ದಲಿತರ ಬೆನ್ನಿಗೆ ಚೂರಿ ಹಾಕಿದೆ" ಎಂದು ಗಂಭೀರ ಆರೋಪ ಮಾಡಿದ್ದಾರೆ.



