ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಕಾಂಗ್ರೆಸ್‌ಸರ್ಕಾರದ ವಿರುದ್ಧ ಕೇಂದ್ರ ಬೃಹತ್‌ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರಿ ನೌಕರರಿಗೆ ಸಂಬಳ ನೀಡದ ಮತ್ತು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದ ಸರ್ಕಾರದ ವೈಫಲ್ಯವನ್ನು ಅವರು ಕಟುವಾಗಿ ಟೀಕಿಸಿದ್ದಾರೆ.
ನೌಕರರಿಗೆ ಮಾರ್ಚ್ ತಿಂಗಳ ವೇತನವಿಲ್ಲ-
"ಕಾಂಗ್ರೆಸ್‌ಸರ್ಕಾರ ಸರ್ಕಾರಿ ನೌಕರರಿಗೆ ಮಾರ್ಚ್‌ತಿಂಗಳ ಸಂಬಳವನ್ನೇ ಇನ್ನೂ ಕೊಟ್ಟಿಲ್ಲ. ಗ್ಯಾರಂಟಿ ಯೋಜನೆಗಳ ಅಬ್ಬರದಲ್ಲಿ ರಾಜ್ಯದ ಬೊಕ್ಕಸ ಖಾಲಿಯಾಗಿದೆ ಎಂಬುದಕ್ಕೆ ಇದು ಸಾಕ್ಷಿ. ಕುಟುಂಬ ನಿರ್ವಹಣೆಗಾಗಿ ನೌಕರರು ಪರದಾಡುವಂತಾಗಿದೆ," ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾಂತ್ರಿಕ ಕಾರಣಗಳ ನೆಪವೊಡ್ಡಿ ವೇತನ ವಿಳಂಬ ಮಾಡುತ್ತಿರುವುದು ಸರ್ಕಾರದ ಆಡಳಿತಾತ್ಮಕ ವೈಫಲ್ಯ ಎಂದು ಅವರು ಕಿಡಿಕಾರಿದ್ದಾರೆ.
ಕುಡಿಯುವ ನೀರಿನ ಸಮಸ್ಯೆ: ಸ್ಪಂದಿಸದ ಮಂತ್ರಿಗಳು
ರಾಜ್ಯದ ಹಲವು ಜಿಲ್ಲೆಗಳಲ್ಲಿ ಭೀಕರ ಬರಗಾಲವಿದ್ದು, ಜನರು ಕುಡಿಯುವ ನೀರಿಲ್ಲದೆ ಕಷ್ಟಪಡುತ್ತಿದ್ದಾರೆ ಎಂದು ಅವರು ಟೀಕಿಸಿದ್ದಾರೆ.
ಈ ಬಗ್ಗೆ ಪ್ರಸ್ತಾಪಿಸಿದ ಅವರು, ಜನರು ಹನಿ ನೀರಿಗಾಗಿ ಕಿಲೋಮೀಟರ್‌ಗಟ್ಟಲೆ ಅಲೆಯುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಮಂತ್ರಿಗಳು ಜನರ ಕಷ್ಟ ಕೇಳಲು ಮೈದಾನಕ್ಕೆ ಇಳಿಯುತ್ತಿಲ್ಲ. ಮಂತ್ರಿಗಳು ಕೇವಲ ಪ್ರಚಾರ ಮತ್ತು ರಾಜಕೀಯದಲ್ಲಿ ನಿರತರಾಗಿದ್ದು, ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ ಮಾಡಿದ್ದಾರೆ.
'ಸರ್ಕಾರಕ್ಕೆ ಜನಹಿತಕ್ಕಿಂತ ರಾಜಕೀಯವೇ ಮುಖ್ಯ'-
"ಜನ ಸಾಮಾನ್ಯರು ನೀರಿನ ಸಮಸ್ಯೆ ಎದುರಿಸುತ್ತಿದ್ದರೆ, ಮಂತ್ರಿಗಳು ಎಸಿ ರೂಮ್‌ಗಳಲ್ಲಿ ಕುಳಿತು ಕಾಲ ಕಳೆಯುತ್ತಿದ್ದಾರೆ. ಆಡಳಿತ ಯಂತ್ರ ಸಂಪೂರ್ಣ ಕುಸಿದಿದ್ದು, ಜನಪ್ರತಿನಿಧಿಗಳು ಕಣ್ಣಿದ್ದೂ ಕುರುಡರಂತೆ ವರ್ತಿಸುತ್ತಿದ್ದಾರೆ," ಎಂದು ಅವರು ಟೀಕಿಸಿದ್ದಾರೆ. ತಕ್ಷಣವೇ ನೌಕರರ ವೇತನ ಬಿಡುಗಡೆ ಮಾಡಲು ಮತ್ತು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಯುದ್ಧೋಪಾದಿಯಲ್ಲಿ ಕ್ರಮ ಕೈಗೊಳ್ಳಬೇಕೆಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.


