ಚಂದ್ರವಳ್ಳಿ ನ್ಯೂಸ್, ತುಮಕೂರು:
ಜಿಲ್ಲೆಯ ಪಾವಗಡ ತಾಲ್ಲೂಕಿನ ಕಣಿವೆನಹಳ್ಳಿ ಕ್ರಾಸ್ ಬಳಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಆಂಧ್ರಪ್ರದೇಶದ ಮಡಕಶಿರಾ ತಾಲ್ಲೂಕಿನ ಗುಡಿಬಂಡೆ ಗ್ರಾಮದ ನಿವಾಸಿಗಳಾದ ಮೇಘಾ (21), ನರಸಿಂಹಮೂರ್ತಿ (28) ಹಾಗೂ ಶ್ರೀನಿವಾಸ್ (45) ಮೃತ ದುರ್ದೈವಿಗಳು. ಪಾವಗಡದಲ್ಲಿ ಕಟ್ಟಡ ನಿರ್ಮಾಣ ಕೆಲಸ ಮಾಡುತ್ತಿದ್ದ ಇವರು, ಶುಕ್ರವಾರ ಸಂಜೆ 6.30ರ ಸುಮಾರಿಗೆ ಕೆಲಸ ಮುಗಿಸಿ ಬೈಕ್ನಲ್ಲಿ ತಮ್ಮೂರಿಗೆ ವಾಪಸಾಗುತ್ತಿದ್ದಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಕಾರು ಚಾಲಕ ಸೇರಿದಂತೆ ಅದರಲ್ಲಿದ್ದ ಮೂವರಿಗೂ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು, ಕಾಮಗಾರಿಗಾಗಿ ಅಗೆದಿದ್ದ ರಸ್ತೆಯನ್ನು ಸರಿಯಾಗಿ ಮುಚ್ಚದಿರುವುದೇ ಈ ದುರ್ಘಟನೆಗೆ ಕಾರಣ ಎಂದು ಸ್ಥಳೀಯರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.




