ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಚಿವ ಸಂಪುಟದಲ್ಲಿ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಕಾಂಗ್ರೆಸ್ ಶಾಸಕರನ್ನು ಶಮನಗೊಳಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಅವರು ಹೊಸ ತಂತ್ರ ರೂಪಿಸಿದ್ದಾರೆ. ಪಕ್ಷದೊಳಗಿನ ಭಿನ್ನಮತ ಶಮನಗೊಳಿಸುವ ಉದ್ದೇಶದಿಂದ ಪ್ರತಿ ಜಿಲ್ಲೆಯ ಶಾಸಕರೊಂದಿಗೆ ನಿಯಮಿತವಾಗಿ ‘ಉಪಾಹಾರ ಸಭೆ’ ನಡೆಸಿ, ಅವರ ಕುಂದುಕೊರತೆಗಳನ್ನು ಆಲಿಸಲು ಸಿಎಂ ಮುಂದಾಗಿದ್ದಾರೆ.
ಸಚಿವ ಸ್ಥಾನದಿಂದ ವಂಚಿತರಾದ ನಾಯಕರಿಗೆ ನಿಗಮ-ಮಂಡಳಿಗಳಲ್ಲಿ ಸೂಕ್ತ ಸ್ಥಾನಮಾನ ನೀಡುವುದು ಹಾಗೂ ಅವರ ಕ್ಷೇತ್ರಗಳಿಗೆ ಅಭಿವೃದ್ಧಿ ಅನುದಾನವನ್ನು ಸಮರ್ಪಕವಾಗಿ ಹಂಚಿಕೆ ಮಾಡುವ ಮಹತ್ವದ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ ಎನ್ನಲಾಗಿದೆ.
ಕೋಲಾರ-ಚಿಕ್ಕಬಳ್ಳಾಪುರ ಶಾಸಕರೊಂದಿಗೆ ಸಭೆ:
ಸೋಮವಾರ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಕಾಂಗ್ರೆಸ್ ಶಾಸಕರ ನಿಯೋಗದೊಂದಿಗೆ ಮುಖ್ಯಮಂತ್ರಿಗಳು ಸಭೆ ನಡೆಸಿದರು. ಈ ವೇಳೆ ಕ್ಷೇತ್ರದ ಅಭಿವೃದ್ಧಿ ಹಾಗೂ 'ಎತ್ತಿನಹೊಳೆ ಯೋಜನೆ'ಯ ಕುರಿತು ಸುದೀರ್ಘ ಚರ್ಚೆ ನಡೆಯಿತು.
ಕೆಎಂಎಫ್ ಅಧ್ಯಕ್ಷ ಗಾದಿಗೆ ತೀವ್ರ ಪೈಪೋಟಿ: ಸಭೆಯಲ್ಲಿ ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಅಧ್ಯಕ್ಷ ಕೆ.ವೈ. ನಂಜೇಗೌಡ ಅವರು, ಈ ಹಿಂದೆ ತಮಗೆ ನೀಡಿದ್ದ ಭರವಸೆಯಂತೆ ಕೆಎಂಎಫ್ ಅಧ್ಯಕ್ಷ ಸ್ಥಾನ ನೀಡಬೇಕೆಂದು ಸಿಎಂ ಅವರನ್ನು ಒತ್ತಾಯಿಸಿದರು. ಆದರೆ, ಈ ಹುದ್ದೆಯ ಮೇಲೆ ಸಿಎಂ ಅವರ ಸಹೋದರ ಹಾಗೂ ಮಾಜಿ ಸಂಸದ ಡಿ.ಕೆ. ಸುರೇಶ್‌ಮತ್ತು ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್‌ಕೂಡ ಕಣ್ಣಿಟ್ಟಿರುವುದು ತೀವ್ರ ಕುತೂಹಲ ಮೂಡಿಸಿದೆ.
ಈ ಮಹತ್ವದ ಸಭೆಯಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ, ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್, ಶಾಸಕರಾದ ಕೆ.ವೈ. ನಂಜೇಗೌಡ, ಎಸ್.ಎನ್. ನಾರಾಯಣಸ್ವಾಮಿ, ಕೊತ್ತನೂರು ಮಂಜುನಾಥ್, ಪ್ರದೀಪ್‌ಈಶ್ವರ್, ಎಸ್.ಎನ್. ಸುಬ್ಬಾರೆಡ್ಡಿ, ಪುಟ್ಟಸ್ವಾಮಿ ಗೌಡ ಹಾಗೂ ವಿಧಾನ ಪರಿಷತ್‌ಸದಸ್ಯ ಅನಿಲ್‌ಕುಮಾರ್‌ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.



