ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
"ಸಿದ್ದಾಂತವೇ ಬದ್ಧತೆ, ಸಂಘಟನೆಯೇ ಶಕ್ತಿ, ಜನಸೇವೆಯೇ ಗುರಿ" ಎಂಬ ಧ್ಯೇಯವಾಕ್ಯದೊಂದಿಗೆ ರಾಷ್ಟ್ರದ ಪ್ರಗತಿ ಹಾಗೂ ಜನಸೇವೆಗಾಗಿ ಬಿಜೆಪಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿರಂತರ ಪ್ರಯತ್ನ ಮುಂದುವರಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪಕ್ಷದ ರಾಜ್ಯ ಕಾರ್ಯಾಲಯ 'ಜಗನ್ನಾಥ ಭವನ'ದಲ್ಲಿ ಗುರುವಾರ ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಮಹತ್ವದ ಪಕ್ಷದ ಸಂಘಟನಾ ಸಭೆ ಜರುಗಿತು.
ಹಿರಿಯ ನಾಯಕರ ಉಪಸ್ಥಿತಿ ಮತ್ತು ಮಾರ್ಗದರ್ಶನ:
ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಶಿವಪ್ರಕಾಶ್, ರಾಷ್ಟ್ರೀಯ ಉಪಾಧ್ಯಕ್ಷರು ಹಾಗೂ ರಾಜ್ಯ ಚುನಾವಣಾ ಉಸ್ತುವಾರಿ ಬೈಜಯಂತ್ ಜಯ ಪಾಂಡಾ ಮತ್ತು ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರ ಘನ ಉಪಸ್ಥಿತಿಯಲ್ಲಿ ಈ ಸಭೆ ನಡೆಯಿತು. ಪಕ್ಷದ ಮುಖಂಡರಿಗೆ ಮುಂಬರುವ ದಿನಗಳಲ್ಲಿ ಸಂಘಟನೆಯನ್ನು ತಳಮಟ್ಟದಿಂದ ಹೇಗೆ ಕೊಂಡೊಯ್ಯಬೇಕು ಎಂಬ ಬಗ್ಗೆ ಕೇಂದ್ರ ನಾಯಕರು ಮಾರ್ಗದರ್ಶನ ನೀಡಿದರು.
ಈ ಉನ್ನತ ಮಟ್ಟದ ಸಂಘಟನಾ ಸಭೆಯಲ್ಲಿ ರಾಜ್ಯದ ಪ್ರಮುಖ ನಾಯಕರು ಭಾಗವಹಿಸಿದ್ದರು.
ವಿಧಾನಸಭಾ ಪ್ರತಿಪಕ್ಷ ನಾಯಕ ಆರ್. ಅಶೋಕ್, ವಿಧಾನ ಪರಿಷತ್‌ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಪಕ್ಷದ ಕೋರ್ ಕಮಿಟಿ ಸದಸ್ಯರು, ಸಂಸದರು, ಶಾಸಕರು, ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿದ್ದು, ಪಕ್ಷದ ಸಂಘಟನಾತ್ಮಕ ಬೆಳವಣಿಗೆಯ ಕುರಿತು ಚರ್ಚಿಸಿದರು.
ಸಭೆಯ ಬಳಿಕ ಮಾತನಾಡಿದ ಬಿ.ವೈ. ವಿಜಯೇಂದ್ರ ಅವರು, "ಜನ ಸೇವೆ ಮತ್ತು ರಾಷ್ಟ್ರದ ಪ್ರಗತಿಯೆಡೆಗೆ ಸೈದ್ಧಾಂತಿಕ ಬದ್ಧತೆಯೊಂದಿಗೆ ಮುನ್ನಡೆಯುತ್ತಿರುವ ನಮ್ಮ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಈ ಸಭೆ ಅತ್ಯಂತ ಯಶಸ್ವಿಯಾಗಿದೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು.



