ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರ ನಿಧನಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವಾರು ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಭಾನುವಾರ ಹಿರಿಯೂರು ನಗರದ ನೆಹರು ಮೈದಾನದಲ್ಲಿ ಡಿ. ಸುಧಾಕರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮದರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, “ನಾನು ಮತ್ತು ಸುಧಾಕರ್ ಅವರು ಆಪ್ತ ಸ್ನೇಹಿತರು. ಇಷ್ಟು ಚಿಕ್ಕ ವಯಸ್ಸಿನಲ್ಲೇ ಅವರು ನಮ್ಮನ್ನು ಅಗಲುತ್ತಾರೆ ಎಂದು ನಾವು ನಿರೀಕ್ಷಿಸಿರಲಿಲ್ಲ," ಎಂದು ಭಾವುಕರಾದರು.
ಆಸ್ಪತ್ರೆಗೆ ದಾಖಲಾಗುವ ಮುನ್ನ ಕೂಡ ಸುಧಾಕರ್ ಅವರು ಅತ್ಯಂತ ಆತ್ಮವಿಶ್ವಾಸದಿಂದ ಇದ್ದರು. ತಮ್ಮ ಕಾಲಿನ ಸಮಸ್ಯೆಯನ್ನು ಸರಿಪಡಿಸಿಕೊಂಡು ಬರುತ್ತೇನೆ ಎಂದು ಹೇಳಿಯೇ ಆಸ್ಪತ್ರೆಗೆ ಹೋಗಿದ್ದರು. ಆದರೆ ಕೊನೆಯ ಹಂತದಲ್ಲಿ ಲಂಗ್ ಇನ್ಫೆಕ್ಷನ್ (ಶ್ವಾಸಕೋಶದ ಸೋಂಕು) ಆದ ಕಾರಣ ಚಿಕಿತ್ಸೆ ಫಲಕಾರಿಯಾಗದೆ ಅವರು ಇಹಲೋಕ ತ್ಯಜಿಸಿದ್ದಾರೆ ಎಂದು ತಿಳಿಸಿದರು.
ಸುಧಾಕರ್ ಅವರು ಚಿತ್ರದುರ್ಗ ಜಿಲ್ಲೆಯ ಅಭಿವೃದ್ಧಿಗಾಗಿ, ಅದರಲ್ಲೂ ವಿಶೇಷವಾಗಿ ರೈತರ ಬದುಕಿನಲ್ಲಿ ಬದಲಾವಣೆ ತರಲು ನಿರಂತರವಾಗಿ ಶ್ರಮಿಸಿದವರು ಎಂದು ಡಿಕೆಶಿ ಸ್ಮರಿಸಿದರು ಅವರು, ಈ ಭಾಗದ ರೈತರ ಹಿತದೃಷ್ಟಿಯಿಂದ ಭದ್ರಾ ಮೇಲ್ದಂಡೆ ಯೋಜನೆಯನ್ನು ಸಂಪೂರ್ಣವಾಗಿ ಜಾರಿಗೆ ತರಲು ಅವರು ಶ್ರಮಿಸಿದ್ದರು. ಟ್ರಯಲ್ ರನ್ ವೇಳೆ ನೀರು ಬಿಡಿಸುವಲ್ಲಿ ಅವರ ಪಾತ್ರ ದೊಡ್ಡದಿದೆ. ವೈ ಜಂಕ್ಷನ್ ಬಳಿಯ ದೀರ್ಘಕಾಲದ ಸಮಸ್ಯೆಯನ್ನು ಬಗೆಹರಿಸಲು ಶಾಸಕರನ್ನು ಒಟ್ಟುಗೂಡಿಸಿ ಹೋರಾಟ ಮಾಡಿದ್ದರು. ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆಲಸ ಮಾಡುವಾಗ ಯಾರಿಗೂ ಕಿರುಕುಳ ನೀಡದ, ಸೌಮ್ಯ ಸ್ವಭಾವದ ವ್ಯಕ್ತಿಯಾಗಿದ್ದರು ಎಂದರು.
ಜಾತಿ-ಧರ್ಮದ ಭೇದವಿಲ್ಲದೆ ಸಾಮಾಜಿಕ ನ್ಯಾಯಕ್ಕಾಗಿ ಕೆಲಸ ಮಾಡಿದ ಸುಧಾಕರ್ ಅವರ ಸಾವು ಪಕ್ಷ ಹಾಗೂ ಸರ್ಕಾರಕ್ಕೆ ತುಂಬಲಾರದ ನಷ್ಟವಾಗಿದೆ. ಸುಧಾಕರ್ ಅವರ ಕುಟುಂಬಕ್ಕೆ ಸರ್ಕಾರ ಹಾಗೂ ಪಕ್ಷವು ಸಂಪೂರ್ಣ ಬೆಂಬಲವಾಗಿ ನಿಲ್ಲಲಿದೆ ಎಂದು ಭರವಸೆ ನೀಡಿದರು. ಇದೇ ವೇಳೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಡಿ.ಕೆ.ಶಿವಕುಮಾರ್ ಅವರು ಮೊಬೈಲ್ ಕರೆ ಮಾಡಿ, ಸಚಿವ ಡಿ.ಸುಧಾಕರ್ ಅವರ ಪುತ್ರ ಸುಹಾಸ್ ಅವರಿಗೆ ಸಾಂತ್ವಾನ ಹೇಳಿದರು.
ಸಂಸದ ಗೋವಿಂದ ಎಂ. ಕಾರಜೋಳ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರ ಅಕಾಲಿಕ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ನಿಧನದ ಸುದ್ದಿಯನ್ನು ನಂಬಲು ಅಸಾಧ್ಯವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಸುಧಾಕರ್ ಅವರು ಒಬ್ಬ ಸಜ್ಜನ ರಾಜಕಾರಣಿಯಾಗಿದ್ದರು. ಸಮಾಜದಲ್ಲಿ ಎಲ್ಲರೊಂದಿಗೆ ಬೆರೆತು, ಜನರ ಪ್ರೀತಿಗೆ ಪಾತ್ರರಾಗಿದ್ದವರು. ಇಂತಹ ಜನಪ್ರಿಯ ವ್ಯಕ್ತಿ ಇಂದು ನಮ್ಮನ್ನು ಅಗಲಿರುವುದು ಇಡೀ ಜಿಲ್ಲೆಗೆ ತುಂಬಲಾರದ ನಷ್ಟವಾಗಿದೆ ಎಂದರು.
ಸುಧಾಕರ್ ಅವರೊಂದಿಗೆ ಕೆಲಸ ಮಾಡಿದ ದಿನಗಳನ್ನು ನೆನಪಿಸಿಕೊಂಡ ಕಾರಜೋಳ, "ನಾನು ಸಚಿವನಾಗಿದ್ದಾಗ ಅವರು ಕೂಡ ನನ್ನ ಸಹೋದ್ಯೋಗಿಯಾಗಿ ಕೆಲಸ ಮಾಡಿದ್ದರು. ಅವರ ಸೌಮ್ಯ ಸ್ವಭಾವ ಮತ್ತು ಕಾರ್ಯವೈಖರಿ ಎಲ್ಲರಿಗೂ ಮಾದರಿಯಾಗಿತ್ತು. ರಾಜಕಾರಣದಲ್ಲಿ ಇರುವವರು ಸಮಾಜಕ್ಕೆ ಮಾದರಿಯಾಗಿ ಬದುಕಬೇಕು ಎನ್ನುವ ತತ್ವಕ್ಕೆ ಅವರು ಕನ್ನಡಿಯಂತಿದ್ದರು ಎಂದರು.
ಸಾವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಆದರೆ ಸುಧಾಕರ್ ಅವರು ಈ ವಯಸ್ಸಿನಲ್ಲೇ ನಮ್ಮನ್ನು ಅಗಲಬಾರದಿತ್ತು. ಅವರಿಗೆ ಕೇವಲ 62 ವರ್ಷ ವಯಸ್ಸಾಗಿತ್ತು. ಇದು ಸಾವು ಬರುವಂತಹ ವಯಸ್ಸಲ್ಲ ಎಂದು ಭಾವುಕರಾದರು.
ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ ಮತ್ತು ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸಿದರು. ಅವರು ಸಮಾಜಕ್ಕಾಗಿ ಹಾಕಿಕೊಟ್ಟ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಮುಂದುವರಿಸಿಕೊಂಡು ಹೋಗುವುದೇ ಅವರಿಗೆ ನಾವು ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ ಎಂದು ಕಾರಜೋಳ ಅವರು ತಿಳಿಸಿದರು.
ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತುಂಬ ಆಘಾತವಾಗಿದೆ. ಅವರು ಜಿಲ್ಲೆಯ ಅಭಿವೃದ್ಧಿಗಾಗಿ ಅಹೋರಾತ್ರಿ ಶ್ರಮಿಸಿದ ಜನಪ್ರಿಯ ನಾಯಕರು ಎಂದು ಕಂಬನಿ ಮಿಡಿದರು.
ಸಚಿವರ ಅಗಲಿಕೆ ಚಿತ್ರದುರ್ಗ ಜಿಲ್ಲೆಗೆ ಮಾತ್ರವಲ್ಲದೆ ಇಡೀ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ಅವರೊಬ್ಬ ಸರಳ ಸಜ್ಜನಿಕೆಯ ವ್ಯಕ್ತಿತ್ವದ ನಾಯಕರಾಗಿದ್ದರು. ಜಿಲ್ಲಾ ಉಸ್ತುವಾರಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಜಿಲ್ಲೆಯ ಅನೇಕ ಕುಂಠಿತಗೊಂಡಿದ್ದ ಯೋಜನೆಗಳಿಗೆ ಚಾಲನೆ ನೀಡಿದ್ದರು. ಜನರ ಸಂಕಷ್ಟಗಳಿಗೆ ತಕ್ಷಣ ಸ್ಪಂದಿಸುವ ಗುಣ ಅವರಲ್ಲಿತ್ತು. ನನ್ನ ಮತ್ತು ಸುಧಾಕರ್ ಅವರ ನಡುವೆ ದಶಕಗಳ ಕಾಲದ ಒಡನಾಟವಿತ್ತು. ರಾಜಕೀಯ ಮೀರಿ ಅವರು ನನಗೆ ವೈಯಕ್ತಿಕವಾಗಿ ಆಪ್ತರಾಗಿದ್ದರು ಎಂದು ರಘುಮೂರ್ತಿ ಸ್ಮರಿಸಿದರು.
ಮಾಜಿ ಶಾಸಕ ಹಾಗೂ ಹಿರಿಯ ರಾಜಕಾರಣಿ ಜಿ.ಎಚ್.ತಿಪ್ಪಾರೆಡ್ಡಿ ಮಾತನಾಡಿ, ಡಿ.ಸುಧಾಕರ್ ಅವರು ಒಬ್ಬ ಸ್ನೇಹಜೀವಿ ಮತ್ತು ಅಭಿವೃದ್ಧಿ ಪರ ಚಿಂತನೆಯುಳ್ಳವರಾಗಿದ್ದರು. 40 ವರ್ಷಗಳ ಕಾಲ ಸಕ್ರಿಯ ರಾಜಕಾರಣದಲ್ಲಿ ಹಂತ ಹಂತವಾಗಿ ಮುನ್ನೆಲೆಗೆ ಬಂದು ಜನಸೇವೆಯನ್ನು ಮಾಡಿದ್ದರು. ಜಿಲ್ಲೆಯ ಅಭಿವೃದ್ಧಿಯಲ್ಲಿ ಸದಾ ಆಸಕ್ತಿ ಹೊಂದಿದ್ದ ಅವರು ಭದ್ರಾ ಮೇಲ್ದಂಡೆ ಯೋಜನೆ, ಕೆರೆಗಳಿಗೆ ನೀರು ತುಂಬಿಸುವ ಕೆಲಸಗಳಿಗಾಗಿ ಸಾಕಷ್ಟು ಶ್ರಮಿಸಿದ್ದರು. ನಾವು ಬೇರೆ ಬೇರೆ ಪಕ್ಷಗಳಲ್ಲಿದ್ದರೂ ಜಿಲ್ಲೆಯ ಅಭಿವೃದ್ಧಿ ಕೆಲಸಗಳ ವಿಚಾರದಲ್ಲಿ ಒಂದೇ ಮನೆಯ ಸದಸ್ಯರಂತೆ ಚರ್ಚೆ ಮಾಡುತ್ತಿದ್ದೆವು. ಅಷ್ಟರಮಟ್ಟಿಗೆ ಅವರೊಂದಿಗೆ ನನಗೆ ಆತ್ಮೀಯ ಒಡನಾಟವಿತ್ತು. ಜಿಲ್ಲೆಯ ಒಬ್ಬ ಸಮರ್ಥ ನಾಯಕನನ್ನು ಕಳೆದುಕೊಂಡಿರುವುದು ಅತ್ಯಂತ ದುರದೃಷ್ಟಕರ ಸಂಗತಿ. ಭಗವಂತನು ಡಿ.ಸುಧಾಕರ್ ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು.
ಚಳ್ಳಕೆರೆಯಲ್ಲಿ ಅಂತ್ಯಕ್ರಿಯೆ: ಮುಖ್ಯಮಂತ್ರಿ ಹಾಗೂ ಗಣ್ಯರ ಭೇಟಿ:
ಚಳ್ಳಕೆರೆಯಲ್ಲಿ ನಾಳೆ ಸಚಿವ ಡಿ.ಸುಧಾಕರ್ ಅಂತ್ಯಕ್ರಿಯೆ ನಡೆಯಲಿದ್ದು, ನಗರದ ಸುಧಾಕರ್ ಸ್ಟೇಡಿಯಂನಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನ ಪಡೆಯಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಎಐಸಿಸಿ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಸೇರಿದಂತೆ ಸಚಿವ ಸಂಪುಟದ ಹಲವು ಸಚಿವರು ಅಂತ್ಯಕ್ರಿಯೆ ಪಾಲ್ಗೊಳ್ಳಲಿದ್ದಾರೆ. ಅಗಲಿದ ನಾಯಕನಿಗೆ ಗೌರವ ಸಲ್ಲಿಸಲು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಮತ್ತು ಸಾರ್ವಜನಿಕರು ಆಗಮಿಸುವ ನಿರೀಕ್ಷೆಯಿದ್ದು, ಸಿದ್ಧತೆಗಳು ಪೂರ್ಣಗೊಂಡಿವೆ. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಹಾಗೂ ಸುಗಮವಾಗಿ ದರ್ಶನ ಪಡೆಯಲು ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತವು ಬಿಗಿ ಬಂದೋಬಸ್ತ್ ಕೈಗೊಳ್ಳಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ವಿಜ್ಞಾನ ತಂತ್ರಜ್ಞಾನ ಹಾಗೂ ಸಣ್ಣ ನೀರಾವರಿ ಸಚಿವ ಬೋಸರಾಜು, ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ, ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ ಅಧ್ಯಕ್ಷ ಪಿ.ರಘು, ವಿಧಾನ ಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ, ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ಜಿ.ಪಂ.ಸಿಇಓ ಡಾ.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್‌ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು, ಸಚಿವರ ಅಪಾರ ಅಭಿಮಾನಿಗಳು ಅಂತಿಮ ದರ್ಶನ ಪಡೆದರು.


